NLP_Assignment_1 / eesanje /url_46_101_11.txt
CoolCoder44's picture
efe37858b586a9a048bc0ecc57a15bf9f7189f016b8fcfa2006a47467850c382
c188c15 verified
raw
history blame
10.6 kB
ರೈತರಿಗೆ ಸಕಾಲದಲ್ಲಿ ಸವಲತ್ತು ಸಿಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ
ವಿಜಯನಗರ, ಜೂ. 21– ರೈತರಿಗೆ ದೊರೆ ಯಬೇಕಾದ ಸೌಲಭ್ಯ ಮತ್ತು ಸವಲತ್ತು ಗಳನ್ನು ಸಕಾಲಕ್ಕೆ ತಲುಪಿಸದೇ ಚೆಲ್ಲಾಟ ವಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿ ಯವರು ಪ್ರಗತಿ ಪರಿಶೀಲನೆ ನಡೆಸಿದರು. ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ ಪ್ರಮಾಣ ಎಷ್ಟಿದೆ ಎನ್ನುವ ಕುರಿತಂತೆ ಒಂದೊಂದಾಗಿ ಮಾಹಿತಿ ಪಡೆದುಕೊಂಡರು. ಕೆಲವೊಮೆ ಕೊಟ್ಟ ಬೀಜ ಮೊಳಕೆಯೊಡೆಯದಿದ್ದರೆ ಎರಡನೇ ಸುತ್ತು ಕೂಡ ಬೀಜಗಳನ್ನು ಕಡ್ಡಾಯವಾಗಿ ರೈತರಿಗೆ ವಿತರಿಸಬೇಕು. ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.
ಉಪ ರೈತ ಸಂಪರ್ಕಗಳನ್ನು ಹೆಚ್ಚೆಚ್ಚು ತೆರೆದು ರೈತರಿಗೆ ಬೀಜ, ರಸಗೊಬ್ಬರ ವಿತರಣೆ ಮಾಡಬೇಕು ಎಂದಾಗ, ಹಗರಿಬೊಮನಹಳ್ಳಿ ಸೇರಿ ನಾನಾ ತಾಲ್ಲೂಕುಗಳಲ್ಲಿ ಈ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ರಾಜ್ಯ ಸರ್ಕಾರದಿಂದ ನೀಡಿದ ಬರ ಪರಿಹಾರದ ಮೊತ್ತ 130 ಕೋಟಿ ರೂಪಾಯಿಗಳನ್ನು ಸಂಪೂರ್ಣವಾಗಿ ಜಿಲ್ಲೆಯ ರೈತರಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಯಾವ ಅರ್ಹ ರೈತರಿಗೂ ಬಾಕಿ ಉಳಿಸಿಕೊಂಡಿಲ್ಲ ಎಂದು ಅಧಿಕಾರಿಗಳು ದಾಖಲೆ ಮುಂದಿಟ್ಟು ವಿವರಿಸಿದರು.
ಬೆಳೆ ಸಮೀಕ್ಷೆಗಳನ್ನು ವೈಜ್ಞಾನಿಕವಾಗಿ ನಡೆಸಿ ಒಬ್ಬರಿಗೂ ಅನ್ಯಾಯ ಆಗದಂತೆ ಪ್ರತಿಯೊಬ್ಬ ರೈತರಿಗೂ ಡಿಬಿಟಿ ಮೂಲಕ ಒಬ್ಬರಿಗೂ ಬಾಕಿ ಉಳಿಯದಂತೆ ಅವರ ಖಾತೆಗಳಿಗೆ ಹಣ ಜಮೆ ಆಗಿರುವುದನ್ನು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಬೆಳೆ ವಿಮೆ ಸಮರ್ಪಕವಾಗಿ ದೊರಕಿಸಲಾಗಿದೆ. ಅತಿ ಹೆಚ್ಚು ಮಳೆಯಿಂದ ಆದ ಹಾನಿ, ನೋಂದಣಿ ಮಾಡಿಕೊಂಡ ಎಲ್ಲಾ ರೈತರಿಗೂ, ಬೆಳೆ ಕಟಾವು ಹೊತ್ತಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಳೆ ವಿಮಾ ಪರಿಹಾರ ವಿತರಣೆಯಾಗಿದೆ ಎಂದು ವಿವರಿಸಿದರು.
ರೈತರ ಜಮೀನುಗಳಿಗೆ ಹೋಗಿ ಮಣ್ಣಿನ ಗುಣಮಟ್ಟಕ್ಕೆ ತಕ್ಕಂತೆ ರೈತರಿಗೆ ತಿಳಿವಳಿಕೆ ನೀಡಿದ್ದೀರಾ ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದರು. ಯಾವ ಯಾವ ಅಧಿಕಾರಿಗಳು ಯಾವ ಯಾವ ಹಳ್ಳಿಗೆ ಹೋಗಿದ್ದೀರಿ? ಎಷ್ಟು ರೈತರಿಗೆ ತಿಳಿವಳಿಕೆ ನೀಡಿದ್ದೀರಿ? ನೀವು ಭೇಟಿ ನೀಡಿ ತಿಳಿವಳಿಕೆ ನೀಡಿದ ಡೈರಿ ಎಲ್ಲಿದೆ ಎಂದು ಮಾಹಿತಿ ನೀಡುವಂತೆ ಸೂಚಿಸಿದರು.
ಡೈರಿ ಬರೆದಿದ್ದೀನಿ. ಆದರೆ ಅದನ್ನು ಕಚೇರಿಯಲ್ಲೇ ಬಿಟ್ಟು ಬಂದಿದ್ದೀನಿ ಎಂದು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಮುಖ್ಯಮಂತ್ರಿ ಗರಂ ಆದರು. ಡೈರಿ ಇಲ್ಲದೆ ಬರಿ ಕೈಲಿ ಬಂದಿದ್ದಕ್ಕೆ ತರಾಟೆಗೆ ತೆಗೆದುಕೊಂಡು ಮುಂದೆ ಹೀಗಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು.
ಆತಹತ್ಯೆ ಮಾಡಿಕೊಂಡವರಿಗೆ ಪರಿಹಾರ ಪಾವತಿಯಲ್ಲಿ ವಿಳಂಬ:2023-24 ರಲ್ಲಿ ಒಟ್ಟು 34 ಮಂದಿ ರೈತರು ಜಿಲ್ಲೆಯಲ್ಲಿ ಆತಹತ್ಯೆ ಮಾಡಿಕೊಂಡಿದ್ದು ಈ ಸಾಲಿನಲ್ಲಿ ಮೂವರು ರೈತರು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಆತಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ದೊರಕಿದೆಯೇ ಎಂದು ಪ್ರಶ್ನಿಸಿದರು.
ಐದು ಮಂದಿ ರೈತರ ಕುಟುಂಬಕ್ಕೆ ಮಾತ್ರ ತಾಂತ್ರಿಕ ತೊಂದರೆ ಆಗಿದೆ. ಉಳಿದೆಲ್ಲರಿಗೂ ಸರಿಯಾದ ಸಮಯಕ್ಕೆ ಪರಿಹಾರದ 5 ಲಕ್ಷ ಮೊತ್ತ ಜಮೆ ಆಗಿದೆ. ಎಫ್‌ಎಸ್‌‍ಎಲ್‌ ವರದಿ 20 ದಿನದೊಳಗೆ ಬರುತ್ತದೆ. ಆ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪರಿಹಾರ ಪಾವತಿ ಪ್ರಕ್ರಿಯೆ ತಡೆವಾಗಿದ್ದಕ್ಕೆ ಮುಖ್ಯಮಂತ್ರಿಗಳು ಸಿಟ್ಟಾಗಿ ತರಾಟೆಗೆ ತೆಗೆದುಕೊಂಡರು. ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್‌ ಎಂದು ಎಚ್ಚರಿಸಿದರು.ಸರ್ಕಾರ ಹಣ ಕೊಟ್ಟಿದೆ, ರೈತರಿಗೆ ತಲುಪಿಸಲು ಏನು ತೊಂದರೆ. ಇನ್ನೂ ಮುಂದೆ ಇಂತಹ ವಿಳಂಬವನ್ನು ಸಹಿಸುವುದಿಲ್ಲ ಎಂದು ಖಾರವಾಗಿ ಹೇಳಿದರು.
ನೀರು, ಮೇವು, ನರೇಗಾ ಉದ್ಯೋಗಕ್ಕೆ ಯಾವ ಕಾರಣಕ್ಕೂ ತೊಂದರೆ ಆಗಬಾರದು. ಪಿಡಿ ಖಾತೆಯಲ್ಲಿರುವ ಇರುವ ಹಣವನ್ನು ಇದಕ್ಕಾಗಿ ಸರಿಯಾಗಿ ಬಳಸಬೇಕು. ಕೆರೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಸಬೇಕು. ಒತ್ತುವರಿಯಿಂದ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಕೊರತೆಯಾಗುತ್ತದೆ.
ನರೇಗಾದಲ್ಲಿ ಕೆರೆ ಹೂಳು ತೆಗೆದು ಕೆರೆಗಳಿಗೆ ಮರು ಜೀವ ಒದಗಿಸಬೇಕು. 52 ಶುದ್ಧ ನೀರಿನ ಘಟಕಗಳು ಕೆಲಸ ಸ್ಥಗಿತಗೊಳಿಸಿದ್ದರೂ ಸರಿಯಾದ ಸಮಯಕ್ಕೆ ರಿಪೇರಿ ಮಾಡಿಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದರು.ಕೆಲವು ಬೋರ್‌ ವೆಲ್‌ಗಳು ಪದೇ ಪದೇ ರಿಪೇರಿಗೆ ಬರುತ್ತಿವೆ ಎನ್ನುವ ಅಧಿಕಾರಿಗಳ ಉತ್ತರಕ್ಕೆ ಗರಂ ಆದ ಸಿಎಂ ರಿಪೇರಿ ಮಾಡಿದ್ದು ಇಲಾಖೆಯವರೇ ತಾನೆ? ಪದೇ ಪದೇ ಕೆಟ್ಟು ಹೋಗುವ ರೀತಿ ರಿಪೇರಿ ಯಾಕೆ ಮಾಡ್ತಾರೆ. ಅದರಲ್ಲಿ ಏನಾದರೂ ರಿಪೇರಿಯಾಗದ ಸಮಸ್ಯೆ ಇದೆಯಾ ಪರಿಶೀಲಿಸಿ ಎಂದರು.
ಜಿಲ್ಲೆಯಲ್ಲಿ ಶೌಚಾಲಯಗಳು ಇಲ್ಲದ ಮನೆಗಳು ಇವೆಯೇ ಎಂದು ಸಿಎಂ ಪ್ರಶ್ನಿಸಿದರು. ಇವೆ ಎಂದು ಅಧಿಕಾರಿಗಳು ಉತ್ತರಿಸಿದರು. ಹೀಗಿದ್ದೂ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆ ಎಂದು ಘೋಷಿಸಿದ್ದು ಏಕೆ ಎಂದು ತೀವ್ರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ನೀವು ಕೊಡುವ ತಪ್ಪು ಮಾಹಿತಿಯನ್ನು ನಾವು ಅಧಿವೇಶನದಲ್ಲಿ ಹೇಳುವುದಕ್ಕೆ ಆಗುತ್ತದೆಯೇ ಎಂದು ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌, ಶಾಸಕರಾದ ಗವಿಯಪ್ಪ, ಕಂಪ್ಲಿ ಗಣೇಶ್‌, ಲತಾ ಎಂ.ಪಿ.ಪ್ರಕಾಶ್‌, ಶ್ರೀನಿವಾಸ್‌‍ ಸಭೆಯಲ್ಲಿ ಉಪಸ್ಥಿತರಿದ್ದರು.