ಅಯೋಧ್ಯೆಯಂತೆ ಗುಜರಾತ್‌ನಲ್ಲಿಯೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ: ರಾಹುಲ್ ಗಾಂಧಿ ಗುಜರಾತ್‌ನಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ ಮತ್ತು ನರೇಂದ್ರ ಮೋದಿಯನ್ನು ಸೋಲಿಸುತ್ತದೆ ಎಂದು ಲಿಖಿತವಾಗಿ ಬರೆದುಕೊಳ್ಳಿ. ನಾವು ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆ ಗುಜರಾತ್‌ನಲ್ಲೂ ಸೋಲಿಸುತ್ತೇವೆ. ಅಹಮದಾಬಾದ್: ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.ಇಂದು ಅಹಮದಾಬಾದ್‌ನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ, "ಅವರು (ಬಿಜೆಪಿ) ನಮಗೆ ಬೆದರಿಕೆ ಹಾಕುವ ಮೂಲಕ ಮತ್ತು ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ. ನಮ್ಮ ಕಚೇರಿಗೆ ಹಾನಿ ಮಾಡಿದಂತೆ ನಾವು ನಿಮ್ಮ ಸರ್ಕಾರವನ್ನು ತೆಗೆಯಲು ಹೊರಟಿದ್ದೇವೆ ಎಂದರು.ಗುಜರಾತ್‌ನಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ ಮತ್ತು ನರೇಂದ್ರ ಮೋದಿಯನ್ನು ಸೋಲಿಸುತ್ತದೆ ಎಂದು ಲಿಖಿತವಾಗಿ ಬರೆದುಕೊಳ್ಳಿ. ನಾವು ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆ ಗುಜರಾತ್‌ನಲ್ಲೂ ಸೋಲಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.ಲೋಕಸಭೆಯಲ್ಲಿ ರಾಹುಲ್ ಗಾಂಧಿಯ ಭಾಷಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಜುಲೈ 1 ರ ರಾತ್ರಿ ಅಹಮದಾಬಾದ್‌ನ ಪಾಲ್ಡಿ ಪ್ರದೇಶದಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ್ದರು. ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ರಾಹುಲ್ ಗಾಂಧಿಯ ಪೋಸ್ಟರ್‌ಗಳನ್ನು ವಿರೂಪಗೊಳಿಸಿದ್ದರು ಮತ್ತು ಕಚೇರಿ ಕಟ್ಟಡವನ್ನು ಕಾಯುತ್ತಿದ್ದ ಕಾವಲುಗಾರನ ಗರ್ಭಿಣಿ ಮಗಳು ಸೇರಿದಂತೆ ಜನರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ಮರುದಿನ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಗೆ ಕಾರಣವಾಯಿತು.ರಾಮಮಂದಿರ ಉದ್ಘಾಟನೆಗೆ ಒಬ್ಬನೇ ಒಬ್ಬ ಸ್ಥಳೀಯ ವ್ಯಕ್ತಿಯನ್ನು ಆಹ್ವಾನಿಸದಿರುವುದನ್ನು ಕಂಡು ಅಯೋಧ್ಯೆಯ ಜನರು ಆಕ್ರೋಶಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಯೋಧ್ಯೆಯಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಅವರ ಸರ್ವೇಯರ್‌ಗಳು ಹಾಗೆ ಮಾಡದಂತೆ ಸಲಹೆ ನೀಡಿದರು. ಒಂದು ವೇಳೆ ಮೋದಿ ಅಯೋಧ್ಯೆಯಿಂದ ಸ್ಪರ್ಧಿಸಿದ್ದರೆ ಅವರು ಸೋಲುತ್ತಿದ್ದರು ಮತ್ತು ಅವರ ರಾಜಕೀಯ ಜೀವನ ಕೊನೆಗೊಳ್ಳುತ್ತಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.