ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (ಕೆಎಂವಿಎಸ್‌ಟಿಡಿಸಿ) ನಡೆದಿರುವ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಿತು. ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (ಕೆಎಂವಿಎಸ್‌ಟಿಡಿಸಿ) ನಡೆದಿರುವ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಿತು.ಪ್ರತಿಭಟನೆಯ ಭಾಗವಾಗಿ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈನ್ನು ಕೋಲಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಇದು ದೊಡ್ಡ ಹಗರಣವಾಗಿದ್ದು, ಕರ್ನಾಟಕದಿಂದ ತೆಲಂಗಾಣಕ್ಕೆ ಚುನಾವಣಾ ವೆಚ್ಚಕ್ಕಾಗಿ ಹಣವನ್ನು ಕಳುಹಿಸಲಾಗಿದೆ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಹಿರಿಯ ಮುಖಂಡ ಮತ್ತು ಎಂಎಲ್‌ಸಿ ಸಿ.ಟಿ.ರವಿ ಅವರು ಆಗ್ರಹಿಸಿದರು.ರಾಜ್ಯ ಸರ್ಕಾರದ ತನಿಖೆಯನ್ನು ಬಿಜೆಪಿ ನಂಬುವುದಿಲ್ಲ. ಹಗರಣದಲ್ಲಿ ಭಾಗಿಯಾಗಿರುವವರು ತೆಲಂಗಾಣ ಮತ್ತು ಆಂಧ್ರಪ್ರದೇಶದವರಾಗಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐ ತನಿಖೆಗೆ ಆಗ್ರಹಿಸಿ ಪತ್ರ ಬರೆದಿದೆ... ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದೂ ಇದೇ ವೇಳೆ ಆರೋಪಿಸಿದರು.ಪ್ರಕರಣ ಸಂಬಂಧ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದ್ದು, 14.07 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಹಣದ ಸ್ಥಿತಿ ಏನು ಎಂದು ಪ್ರಶ್ನಿಸಿದರು.700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು, ಸಂಪೂರ್ಣ ತನಿಖೆಯ ಅಗತ್ಯವಿದೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.