ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದು ತಿಳಿಸಿದರು.ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಅವರು ಬರೆದಿದ್ದಾರೆನ್ನಲಾಗಿದೆ.ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.