ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರಿಗೆ ಸೋಮವಾಗ ಸಿಹಿ ಸುದ್ದಿ ನೀಡಿದ್ದು, ಬಹು ನಿರೀಕ್ಷಿತ 7ನೇ ವೇತನ ಆಯೋಗದ ವರದಿಯ ಶಿಫಾರಸು ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಹೆಚ್ಚಾಗಲಿದೆ.7ನೇ ವೇತನ ಆಯೋಗ ಜಾರಿಗೊಳಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ್ದು, ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಮಾರ್ಚ್‌ 16 ರಂದು ಶೇ. 27.5 ರಷ್ಟು ವೇತನ ಪರಿಷ್ಕರಣೆ ಮಾಡುವ ಶಿಫಾರಸು ಒಳಗೊಂಡ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಬಳಿಕ ಸಿಎಂ, ಇದನ್ನು ಜಾರಿಗೆ ತರುವ ಬಗ್ಗೆ ಹಣಕಾಸು ಇಲಾಖೆಗೆ ಮಾಹಿತಿ ಕೇಳಿದ್ದ‌ರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.ಆಗಸ್ಟ್ ಒಂದರಿಂದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ಕೊಡಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.#7thPayCommissionReport