ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್‌ ಕಸ್ಟಡಿಗೆ ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ, ಕಿರುಕುಳ, ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.ಈ ವೇಳೆ ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.ಏನಿದು ಪ್ರಕರಣ?ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆಂಜು ಆರೋಪಿಸಿದ್ದರು.ಶಾಸಕ ಮುನಿರತ್ನ ಸೆಪ್ಟೆಂಬರ್ 9 ರಂದು 20 ಲಕ್ಷ ರೂಪಾಯಿ ಹಣ ಕೇಳಿದ್ದರು. ದುಡ್ಡು ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲದೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು.ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಆದರೆ, ಅಷ್ಟರಲ್ಲಾಗಲೇ ಮುನಿರತ್ನ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದ ಪೊಲೀಸರು ಶನಿವಾರ ರಾತ್ರಿ ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧನಕ್ಕೊಳಪಡಿಸಿದ್ದರು.