ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ: ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪತ್ರಕರ್ತ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು ನ್ಯೂಸ್ ಪೋರ್ಟಲ್‌ನೊಂದಿಗೆ ಕೆಲಸ ಮಾಡುತ್ತಿರುವ ಪತ್ರಕರ್ತ ಸಲಾಹ್ ಉದ್ದೀನ್ ಶೋಯೆಬ್ ಚೌಧರಿ ಮತ್ತು ಅದಿತಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅವರ ತಾಯಿ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಅವರ ಬಗ್ಗೆ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಬಾಂಗ್ಲಾದೇಶದ ಪತ್ರಕರ್ತ ಮತ್ತು ಭಾರತದ ಸುದ್ದಿ ಪೋರ್ಟಲ್‌ನ ಮಹಿಳಾ ಸಿಬ್ಬಂದಿ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ನ್ಯೂಸ್ ಪೋರ್ಟಲ್‌ನೊಂದಿಗೆ ಕೆಲಸ ಮಾಡುತ್ತಿರುವ ಪತ್ರಕರ್ತ ಸಲಾಹ್ ಉದ್ದೀನ್ ಶೋಯೆಬ್ ಚೌಧರಿ ಮತ್ತು ಅದಿತಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಸಂಬಂಧಿಸಿದ ದೂರುದಾರ, ಶ್ರೀನಿವಾಸ್ ಜಿ ಅವರ ಪ್ರಕಾರ, ಬಾಂಗ್ಲಾದೇಶದ ಪತ್ರಕರ್ತ, ಸೋನಿಯಾ ಗಾಂಧಿ ಅವರನ್ನು ವಿದೇಶಿ ಗೂಢಚಾರಿಕೆ ಸಂಸ್ಥೆಗೆ ಲಿಂಕ್ ಮಾಡುವ ಪೋಸ್ಟ್ ಅನ್ನು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.ಗಾಂಧಿ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಚೌಧರಿ ಹೀಗೆ ಮಾಡಿದ್ದಾರೆ ಮತ್ತು ಎರಡು ಧರ್ಮಗಳ ನಡುವೆ ದ್ವೇಷವನ್ನು ಹರಡಲು ಪತ್ರಕರ್ತರು ಇಂತಹ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ."ನಮಗೆ ಬಂದ ದೂರಿನ ಆಧಾರದ ಮೇಲೆ, ನಾವು ಗಾಂಧಿ ಕುಟುಂಬದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 196 (ಧರ್ಮ, ಜನಾಂಗ, ಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.