ಹಗರಣ-ಕಳಂಕಿತ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿ ಪೂರ್ಣಗೊಳಿಸುವುದಿಲ್ಲ: ಅಶೋಕ್ ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಚಿವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಲ್ಲಿಯೂ ವಿಫಲರಾಗಿದ್ದಾರೆ, ಹಾನಿಗೊಳಗಾದ ಆಸ್ತಿಗಳಿಗೆ ಪರಿಹಾರ ಬಿಡುಗಡೆ ಮಾಡುವುದು ಅಗತ್ಯವಾಗಿದೆ. ಹಾಸನ: ಹಗರಣ ಹಾಗೂ ಕಳಂಕಿತ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಬಾನುವಾರ ಹೇಳಿದರು.ಸಕಲೇಶಪುರ ತಾಲ್ಲೂಕಿನಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಮಂಡಳಿಗಳು ಮತ್ತು ನಿಗಮಗಳಿಂದ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ಈ ಹಣವನ್ನು ತೆಲಂಗಾಣದಲ್ಲಿ ಚುನಾವಣೆಯಲ್ಲಿ ಖರ್ಚು ಮಾಡಲಾಗಿದೆ. ವಾಲ್ಮೀಕಿ ಹಗರಣದಲ್ಲಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಮುಖ್ಯಮಂತ್ರಿಗಳು ಸಚಿವರು ಮತ್ತು ಶಾಸಕರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದರು.ಇದೇ ವೇಳೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ "ಎಸ್‌ಸಿ/ಎಸ್‌ಟಿ ವಿರೋಧಿ" ಎಂದು ಬಣ್ಣಿಸಿದ ಅವರು, ಅಧಿಕಾರಾವಧಿಯ ಮೊದಲ ವರ್ಷದಲ್ಲಿಯೇ ಹಲವಾರು ಹಗರಣಗಳಲ್ಲಿ ಸಿಲುಕಿದ್ದಾರೆ. ಹೀಗಾಗಿ ಸ್ಪಷ್ಟ ಬಹುಮತ ಹೊಂದಿದ್ದರೂ ಸರ್ಕಾರ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಸಾಧ್ಯತೆಗಳಿ ಕಡಿಮೆ ಎಂದು ಹೇಳಿದರು.ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಐದು ದಶಕಗಳಿಂದ ದೇಶವನ್ನು ಲೂಟಿ ಮಾಡಿದೆ. ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಚಿವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಲ್ಲಿಯೂ ವಿಫಲರಾಗಿದ್ದಾರೆ, ಹಾನಿಗೊಳಗಾದ ಆಸ್ತಿಗಳಿಗೆ ಪರಿಹಾರ ಬಿಡುಗಡೆ ಮಾಡುವುದು ಅಗತ್ಯವಾಗಿದೆ. ಮಳೆಯ ಅನಾಹುತದ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡನೀಯವಾಗಿದ್ದು, ಸೋಮವಾರ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗುವುದು ಎಂದರು.