ನಾನೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ: ಸಿದ್ದರಾಮಯ್ಯ ಬಿಜೆಪಿಯವರು ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಸೇಡಿನ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಈಗ ಯಾರೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬುಧವಾರ ಹೇಳಿದ್ದಾರೆ.ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ನಾಯಕತ್ವ ಬದಲಾದರೆ ಸಿಎಂ ಆಗುವ ರೇಸ್‌ಗೆ ಕಾಂಗ್ರೆಸ್‌ನ ಕೆಲ ನಾಯಕರು ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದು, ಹಲವರು ಬಹಿರಂಗವಾಗಿಯೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರೂ ಹೇಳಿಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ. ಹೀಗಿರುವಾಗ ಯಾರಾದರೂ ಸಿಎಂ ಆಗುತ್ತೇನೆ ಎಂದು ಏಕೆ ಹೇಳುತ್ತಾರೆ? ಎಲ್ಲರೂ ಹೇಳುತ್ತಿರುವುದು ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.‘ಸಿದ್ದರಾಮಯ್ಯ ಸೂಚಿಸಿದರೆ ಸಿಎಂ ಆಗುತ್ತೇನೆ’ ಎಂದು ಕೆಲ ಮುಖಂಡರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಹುದ್ದೆ ಖಾಲಿ ಇಲ್ಲದಿರುವಾಗ ಯಾರಾದ್ರೂ ಯಾಕೆ ಇಂಥ ಸೂಚನೆ ಕೊಡ್ತಾರೆ’ ಎಂದರು.ಸೇಡಿನ ರಾಜಕೀಯ ಮಾಡಲ್ಲ, ಆದ್ರೆ ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸುಮಾರು 21 ಹಗರಣಗಳ ತನಿಖೆ ಚುರುಕುಗೊಳಿಸಲು ಮತ್ತು ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಇದರಲ್ಲಿ ಯಾವುದೇ ಸೇಡಿನ ರಾಜಕೀಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಸಂಪುಟ ಉಪ ಸಮಿತಿ ರಚನೆಯ ಹಿಂದೆ “ಸೇಡಿನ ರಾಜಕಾರಣ” ಇದೆ ಎಂಬ ಬಿಜೆಪಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಿದ್ದರಾಮಯ್ಯ, ಬಿಜೆಪಿಯವರು ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಸೇಡಿನ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.ನಾನು ಹಿಂದಿನ ಸರ್ಕಾರದ(ಬಿಜೆಪಿಯ) ಅವಧಿಯಲ್ಲಿ 21ಕ್ಕೂ ಹೆಚ್ಚು ಹಗರಣಗಳನ್ನು ಉಲ್ಲೇಖಿಸಿದ್ದೇನೆ. ಅವುಗಳೆಲ್ಲದರ ತನಿಖೆಯನ್ನು ಚುರುಕುಗೊಳಿಸಲು ಮತ್ತು ಸರ್ಕಾರ ಮತ್ತು ಕ್ಯಾಬಿನೆಟ್‌ಗೆ ಏನು ಮಾಡಬೇಕು ಎಂಬುದರ ಕುರಿತು ಸಲಹೆ ನೀಡಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು."ಎಲ್ಲಾ ಪ್ರಕರಣಗಳಿಗೂ ಸಮತಿ ರಚನೆಯಾಗಿಲ್ಲ. ಪಿಎಸ್ಐ ನೇಮಕಾತಿ ಹಗರಣ, 40 ಪರ್ಸೆಂಟ್ ಕಮಿಷನ್, ಕೋವಿಡ್-19, ಬಿಟ್‌ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಪುಟ ಉಪಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ಅವರು ಸದಸ್ಯರಾಗಿದ್ದಾರೆ.