ಉತ್ತರ ಪ್ರದೇಶ | ದೆಹಲಿ-ಬರೇಲಿ ಹೆದ್ದಾರಿಯಲ್ಲಿ ಅಪಘಾತ: 3 ಸಾವು, 49 ಮಂದಿಗೆ ಗಾಯ ರಾಂಪುರ (ಉತ್ತರ ಪ್ರದೇಶ): ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟು, ಸುಮಾರು 49 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಲ್ಲಿನ ಮಿಲಾಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕನ್ವರ್ ಯಾತ್ರಾ ಮಾರ್ಗದ ದೆಹಲಿ-ಬರೇಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹರಿದ್ವಾರದಿಂದ ಶ್ರಾವಸ್ತಿ ಜಿಲ್ಲೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಸರ್ಕಾರಿ ಬಸ್ (ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ– ) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಜೋಗಿಂದರ್ ಸಿಂಗ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಂಪುರ ವಿದ್ಯಾಸಾಗರ್ ಮಿಶ್ರಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸುಮಾರು 49 ಮಂದಿ ಗಾಯಗೊಂಡಿದ್ದಾರೆ ಎಂದು ಜೋಗಿಂದರ್ ಸಿಂಗ್ ಹೇಳಿದ್ದಾರೆ. ಗಾಯಾಳುಗಳನ್ನು ಮಿಲಾಕ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 9 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.