ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ನಿಧಿ ಅನ್ಯ ಕಾರ್ಯಗಳಿಗೆ ಬಳಕೆ: ಬಿಜೆಪಿ ನವದೆಹಲಿ: ಕರ್ನಾಟಕದಲ್ಲಿನ ಕಾಂಗ್ರೆಸ್‌ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು, ರಾಜ್ಯ ಚುನಾವಣಾ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ನೀಡಿದ್ದ ಭರವಸೆಗಳ ಈಡೇರಿಕೆಗೆ ಬಳಸುತ್ತಿದೆ ಎಂದು ಬಿಜೆಪಿ ಶುಕ್ರವಾರ ಆರೋಪ ಮಾಡಿದೆ. ‘ಈ ಮೂಲಕ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಸಂವಿಧಾನವನ್ನು ಉಲ್ಲಂಘಿಸುತ್ತಿದ್ದು, ಕ್ರಮ ಕೈಗೊಳ್ಳಬೇಕು’ ಎಂದು ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ‘ರಾಜ್ಯ ಸರ್ಕಾರವು ಜನರನ್ನು ವಂಚಿಸುತ್ತಿದೆ’ ಎಂದ ಅವರು, ಇದು ರಾಹುಲ್‌ ಗಾಂಧಿ ಅವರ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಹೇಳಿದರು. ಒಂದೆಡೆ ರಾಹುಲ್ ಗಾಂಧಿ ಅವರು ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಓಡಾಡುತ್ತಿದ್ದರೆ, ಕರ್ನಾಟಕದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಅವರು ದೂರಿದರು. ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾದ ₹39,121 ಕೋಟಿಗಳಲ್ಲಿ ₹14,730 ಕೋಟಿಗಳನ್ನು ಕಾಂಗ್ರೆಸ್‌ ಸರ್ಕಾರವು, ‌ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಿರುಗಿಸಿದೆ ಎಂದು ವರದಿಯೊಂದನ್ನು ಉಲ್ಲೇಖಿಸಿ ಅವರು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.