ವಿಚಾರಣೆಗೆ ಹಾಜರಾಗಲು ಜಾರ್ಖಂಡ್ ಸಚಿವ ಆಲಂಗೆ ಇ.ಡಿ ನೋಟಿಸ್ ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮೇ 14ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ನೋಟಿಸ್ ನೀಡಿದೆ. ಇತ್ತೀಚೆಗೆ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಗೆಲಸದ ವ್ಯಕ್ತಿಗೆ ಸೇರಿದ ಮನೆಯಲ್ಲಿ ₹32 ಕೋಟಿ ಹಣವನ್ನು ಇ.ಡಿ ಪತ್ತೆ ಹಚ್ಚಿತ್ತು. ಇದಾದ ಬಳಿಕ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಸಂಬಂಧ ರಾಂಚಿಯಲ್ಲಿರುವ ಇ.ಡಿ ಕಚೇರಿಗೆ ಮಂಗಳವಾರ ಹಾಜರಾಗಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಸುವಂತೆ ಆಲಂ ಅವರಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣವಿದು ಎನ್ನಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.