ಪಶ್ಚಿಮ ಬಂಗಾಳ | ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಚೇತರಿಕೆ ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ಒದಗಿಸುತ್ತಿರುವ ವೈದ್ಯರು ತಿಳಿಸಿದ್ದಾರೆ. ಗುರುವಾರ ರಾತ್ರಿ (ಮಾ.14) ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ದಕ್ಷಿಣ ಕೋಲ್ಕತ್ತದ ಕಾಳಿಘಾಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿದ್ದರು. ಹಣೆ ಹಾಗೂ ಮೂಗಿಗೆ ಗಾಯಗೊಂಡ ಮಮತಾ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಣೆಯಲ್ಲಿ ತೀವ್ರ ರಕ್ತಸ್ರಾವ ಆಗಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. '69 ವರ್ಷದ ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯದ ನೋವು ಕಡಿಮೆಯಾಗಿದೆ. ಆದರೂ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ' ಎಂದು ಎಸ್‌ಎಸ್‌ಕೆಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಮತಾ ಆರೋಗ್ಯದ ಬಗ್ಗೆ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.