ದೆಹಲಿ: ಕದ್ದು ಪರಾರಿ ಆಗುವ ವೇಳೆ ಕೊಳವೆಬಾವಿಗೆ ಬಿದ್ದ ವ್ಯಕ್ತಿ ಸಾವು ನವದೆಹಲಿ: ಇತ್ತೀಚೆಗೆ ದೆಹಲಿ ಜಲ ಮಂಡಳಿಯ 40 ಅಡಿ ಆಳದ ಕೊಳವೆಬಾವಿಗೆ ಬಿದ್ದು ಮೃತಪಟ್ಟಿರುವ ವ್ಯಕ್ತಿಯು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುವಾಗ ದುರ್ಘಟನೆ ನಡೆದಿದೆ ಎಂದು ಪೊಲೀಸರು ಎಫ್ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ. ಭಾನುವಾರ ಬೆಳಗಿನ ಜಾವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಇಬ್ಬರು ವ್ಯಕ್ತಿಗಳು ಸ್ಕೂಟಿ ವಾಹನದಲ್ಲಿ ಹಿಂಬಾಲಿಸುತ್ತಿದ್ದರು. ಅವರಿಂದ ತಪ್ಪಿಸಿಕೊಳ್ಳಲು ಹೋದ ವ್ಯಕ್ತಿಯು ಕೊಠಡಿಯ ಒಳಗಿದ್ದ ಕೊಳವೆಬಾವಿಯಲ್ಲಿ ಬಿದ್ದಿದ್ದಾನೆ. ಇದನ್ನು ಭದ್ರತಾ ಸಿಬ್ಬಂದಿಯೊಬ್ಬರು ನೋಡಿದ್ದಾರೆ. ಆದರೆ, ಈ ಮಾಹಿತಿಯು ಇನ್ನೂ ಖಚಿತವಾಗದ ಕಾರಣ ಈ ಅಂಶವನ್ನು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ವ್ಯಕ್ತಿಯು ಕೊಳವೆಬಾವಿಗೆ ಬಿದ್ದಿದ್ದ. ಎನ್‌ಡಿಆರ್‌ಎಫ್ ಮತ್ತು ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿಯ 14 ಗಂಟೆಗಳ ನಿರಂತರ ಕಾರ್ಯಾಚರಣೆ ಮೂಲಕ ಆ ವ್ಯಕ್ತಿಯ ಮೃತದೇಹವನ್ನು ಹೊರತೆಗೆಯಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.