ಗೋವಾ | ಫಾರ್ಮ್ ಹೌಸ್‌ನಲ್ಲಿ ಸ್ಫೋಟ; ಓರ್ವ ಬಂಧನ ಪಣಜಿ: ಉತ್ತರ ಗೋವಾದ ಅನ್ಸೊಲೆಮ್ ಗ್ರಾಮದ ಖಾಸಗಿ ಫಾರ್ಮ್ ಹೌಸ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಿರೊಂಡ ಪಂಚಾಯತ್‌ನ ಅನ್ಸೊಲೆಮ್ ಗ್ರಾಮದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಹತ್ತಿರದ ಹಲವು ಮನೆಗಳಲ್ಲಿ ಬಿರುಕು ಬಿಟ್ಟಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟಕಗಳಿದ್ದ ಗೋಡೌನ್ ಸಂಪೂರ್ಣವಾಗಿ ನಾಶವಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ನಾಲ್ಕು ಕಿ.ಮೀ. ದೂರದ ವಾಲ್ಪೋಯಿ ಪಟ್ಟಣದಲ್ಲೂ ಸ್ಫೋಟದ ಸದ್ದು ಕೇಳಿಸಿತ್ತು ಎಂದು ಅವರು ಹೇಳಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ವಿಧಿವಿಜ್ಞಾನ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಸುತ್ತುಮುತ್ತಲಿನ ಪ್ರದೇಶದಲ್ಲಿರುವ ಸ್ಟೋನ್ ಕ್ರಷರ್‌ಗಳಲ್ಲಿ ಜಿಲೆಟಿನ್ ಸ್ಫೋಟಕಗಳನ್ನು ಬಳಸಲಾಗುತ್ತಿದೆ ಎಂದು ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.