5,8 ಮತ್ತು 9ನೇ ತರಗತಿ ಬೋರ್ಡ್‌ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಆದೇಶ ನವದೆಹಲಿ: ಕರ್ನಾಟಕದಲ್ಲಿ 5,8, 9 ಹಾಗೂ 11ನೇ ತರಗತಿಗಳ ಬೋರ್ಡ್‌ ಪರೀಕ್ಷೆಗಳ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ, ಈ ಫಲಿತಾಂಶವನ್ನು ತಡೆ ಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ತಮ್ಮ ಅನಿಶ್ಚಿತ ನಿರ್ಧಾರಗಳಿಂದ ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಆಟವಾಡುತ್ತಿರುವುದು ಅಲ್ಲದೆ, ಪೋಷಕರಿಗೂ ತೊಂದರೆ ಉಂಟು ಮಾಡುತ್ತಿರುವ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಪಂಕಜ್‌ ಮಿತ್ತಲ್ ಅವರಿದ್ದ ನ್ಯಾಯಪೀಠ, ‘ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ಆತಂಕ, ಒತ್ತಡ ಉಂಟು ಮಾಡುವುದಷ್ಟೇ ಅಲ್ಲದೇ, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ನಡುವೆ ಬಿಕ್ಕಟ್ಟನ್ನು ತಂದಿಟ್ಟಿದೆ’ ಎಂದಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್‌ ಮೂಲಕ ನಡೆಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್‌ ಮಾರ್ಚ್‌ 22ರಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆಯನ್ನೂ ನೀಡಿದೆ. ಹೈಕೋರ್ಟ್‌ ವಿಭಾಗೀಯ ಪೀಠ ನೀಡಿರುವ ಆದೇಶವು ಆರ್‌ಟಿಇ ಕಾಯ್ದೆಯ ನಿಯಮಗಳು ಮತ್ತು ನಿಬಂಧನೆಗಳಿಗೆ ಅನುಗುಣವಾಗಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಫಲಿತಾಂಶ ಪ್ರಕಟಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಏಪ್ರಿಲ್‌ 6ರಂದು ಹೊರಡಿಸಿದ್ದ ಆದೇಶಕ್ಕೂ ನ್ಯಾಯಪೀಠ ತಡೆಯಾಜ್ಞೆ ನೀಡಿದೆ. ‘ಬೆಳಿಗ್ಗೆ 9 ಗಂಟೆಯ ಒಳಗೆ ಫಲಿತಾಂಶ ಪ್ರಕಟಿಸುವಂತೆ ಏಪ್ರಿಲ್‌ 6ರಂದು ಹೊರಡಿಸಿರುವ ಆದೇಶ ದುರುದ್ದೇಶಪೂರಿತವಾಗಿದೆ. ಯಾಕೆಂದರೆ, ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಬಾರದು. ಸಲ್ಲಿಸಿದರೂ ಅದು ಮಾನ್ಯತೆ ಕಳೆದುಕೊಳ್ಳಬೇಕು ಎಂಬ ದುರುದ್ದೇಶ ಈ ಆದೇಶದ ಹಿಂದಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ‘ಒಂದು ವೇಳೆ ಯಾವುದೇ ಶಾಲೆ ಫಲಿತಾಂಶ ಪ್ರಕಟಿಸಿದ್ದರೆ ಅದಕ್ಕೆ ಮಾನ್ಯತೆ ಇಲ್ಲ. ಪೋಷಕರಿಗೂ ತಿಳಿಸಬಾರದು’ ಎಂದು ತಾಕೀತು ಮಾಡಿತು. ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಪೀಠವು, ಏಪ್ರಿಲ್‌ 23ಕ್ಕೆ ವಿಚಾರಣೆಯನ್ನು ಮುಂದೂಡಿತು. ಬೋರ್ಡ್‌ ಪರೀಕ್ಷೆ ವಿರೋಧಿಸಿ ಕೆಲ ಖಾಸಗಿ ಶಾಲಾ ಸಂಘಟನೆಗಳು ಹೈಕೋರ್ಟ್‌ ಮೊರೆ ಹೋಗಿದ್ದವು. ಸಂಘಟನೆಗಳ ಮನವಿ ಪುರಸ್ಕರಿಸಿದ್ದ ಏಕ ಸದಸ್ಯ ನ್ಯಾಯ‍ಪೀಠ ಬೋರ್ಡ್‌ ಪರೀಕ್ಷೆಗಳನ್ನು ರದ್ದು ಮಾಡಿತ್ತು. ನಂತರ ಆ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತಡೆ ನೀಡಿತ್ತು. ನಂತರ ಸಂಘಟನೆಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದವು. ಇದೇ ಮಾರ್ಚ್‌ 11ರಿಂದ ಆರಂಭವಾಗಿದ್ದ ಬೋರ್ಡ್‌ ಪರೀಕ್ಷೆಗಳನ್ನು ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್ 13ರಂದು ಸ್ಥಗಿತಗೊಳಿಸಲಾಗಿತ್ತು. ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.