ಹಲ್ದ್ವಾನಿ ಹಿಂಸಾಚಾರ: ಕರ್ಫ್ಯೂ ತೆರವು ಡೆಹರಾಡೂನ್‌: ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆ ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. 12 ದಿನಗಳ ಬಳಿಕ ಮಂಗಳವಾರ ಬೆಳಿಗ್ಗೆ 5 ಗಂಟೆಯಿಂದ ಜಾರಿಗೆ ಬರುವಂತೆ ಕರ್ಫ್ಯೂವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆ. 8 ರಂದು ಬನ್‌ಭೂಲ್‌ಪುರದಲ್ಲಿ ಮದರಸಾ ಕೆಡವಿದ ಹಿನ್ನೆಲೆ ಹಿಂಸಾಚಾರ ಭುಗಿಲೆದ್ದಿತು. ಸ್ಥಳೀಯರು ಪುರಸಭೆಯ ಕಾರ್ಮಿಕರು ಮತ್ತು ಪೊಲೀಸರ ಮೇಲೆ ಕಲ್ಲು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ‌ಪೊಲೀಸ್ ಸಿಬ್ಬಂದಿಯಿದ್ದ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಹಿಂಸಾಚಾರದಲ್ಲಿ, ಆರು ಮಂದಿ ಗಲಭೆಕೋರರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 68 ಜನರನ್ನು ಬಂಧಿಸಲಾಗಿದ್ದು, ಅವರ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.