ಪಶ್ಚಿಮ ಬಂಗಾಳದ ಉಳಿವಿಗಾಗಿ ಮಮತಾ ಸರ್ಕಾರವನ್ನು ಕಿತ್ತೊಗೆಯಬೇಕು: ಬಿಜೆಪಿ ನವದೆಹಲಿ: ಪಶ್ಚಿಮ ಬಂಗಾಳದ ಉಳಿವಿಗಾಗಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸೋಮವಾರ ಹೇಳಿದೆ. ಸಂದೇಶ್‌ಖಾಲಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪ ಸಂಬಂಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲಘುವಾದ ಉತ್ತರ ನೀಡಿದ್ದಾರೆ. ಅವರು ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಬಿಜೆಪಿ ಸಂಸದೆ ಲಾಕೆಟ್‌ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂದೇಶ್‌ಖಾಲಿಯಲ್ಲಿ ನಡೆದ ಘಟನೆ ಇರಾಕ್‌ ಹಾಗೂ ಪಾಕಿಸ್ತಾನದಂತಹ ದೇಶಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನೆನಪಿಸುತ್ತದೆ ಎಂದು ಚಟರ್ಜಿ ಹೇಳಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಹಗರಣದ ಸಂಬಂಧ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ಟಿಎಂಸಿ ಮುಖಂಡ ಶಜಹಾನ್ ಶೇಖ್ ಅವರನ್ನು ಬ್ಯಾನರ್ಜಿ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅದಕ್ಕಾಗಿಯೇ ಶೇಖ್ ಅವರನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ ಆತನ ಕೆಲವು ಬೆಂಬಲಿಗರನ್ನು ಬಂಧಿಸಿದ್ದಾರೆ. ಸರ್ಕಾರದಿಂದ ಆಶ್ರಯ ಪಡೆದಿರುವ ಶೇಖ್‌ನನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಚಟರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ರಾಜ್ಯದಲ್ಲಿ ಮಹಿಳೆಯರು ಅತ್ಯಂತ ಅಸುರಕ್ಷಿತರಾಗಿದ್ದಾರೆ ಎಂದು ಚಟರ್ಜಿ ಆರೋಪಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.