ಸಿದ್ದರಾಮಯ್ಯ ಅರ್ಜಿ ವಿಚಾರಣೆ ಇಂದು ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೋಮವಾರ ನಡೆಸಲಿದೆ. ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್‌ ಇತ್ತೀಚೆಗೆ ವಜಾಗೊಳಿಸಿತ್ತು. ಈ ತೀರ್ಪಿನ ವಿರುದ್ಧ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌, ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್‌, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯೂ ಆದ ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಅವರಿಗೆ ತಲಾ ₹ 10,000 ದಂಡ ವಿಧಿಸಿದ್ದ ಹೈಕೋರ್ಟ್‌, ಎಲ್ಲರೂ ‌ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಫೆಬ್ರುವರಿ 6ರಂದು ತೀರ್ಪು ನೀಡಿತ್ತು. ಸಿದ್ದರಾಮಯ್ಯ ಅವರ ವಕೀಲ ರಾಜೇಶ್‌ ಗುಲಾಬ್‌ ಇನಾಮದಾರ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಕಾಂಗ್ರೆಸ್‌ನ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೊಲೀಸರ ಪ್ರಕಾರ, ಈ ಪ್ರತಿಭಟನೆಯಿಂದ ಸಂಚಾರ ದಟ್ಟಣೆಯಾಗಿ, ಪ್ರಯಾಣಿಕರಿಗೆ ಅನನುಕೂಲವಾಗಿತ್ತು. ‘ಪ್ರತಿಭಟನಾ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಯಾರಿಗೂ ಇದರಿಂದ ತೊಂದರೆ ಆಗಿಲ್ಲ. ಈ ಕ್ರಿಮಿನಲ್‌ ಪ್ರಕರಣದ ನ್ಯಾಯಿಕ ಪ್ರಕ್ರಿಯೆ ಮುಂದುವರಿಸುವುದರಿಂದ ಕಾನೂನು ದುರುಪಯೋಗ ಆಗುತ್ತದೆ’ ಎಂದು ಸಿದ್ದರಾಮಯ್ಯ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.