ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಲಖನೌ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಹುದ್ದೆಯಿಲ್ಲದೆ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ‘ಯಾವುದೇ ಹುದ್ದೆಯಿಲ್ಲದೆ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ‘ ಎಂದು ತಿಳಿಸಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮೌರ್ಯ ಅವರು ಸಮಾಜವಾದಿ ಪಕ್ಷದಿಂದ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಫಾಜಿಲ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸಮಾಜವಾದಿ ಪಕ್ಷ ಸೇರುವ ಮೊದಲು ಅವರು ಬಿಜೆಪಿಯಲ್ಲಿದ್ದರು. ಮೌರ್ಯ ಅವರು ರಾಮಚರಿತಮಾನಸ ಮತ್ತು ಅಯೋಧ್ಯೆ ದೇವಾಲಯದ ಪ್ರತಿಷ್ಠಾಪನೆ ಸಮಾರಂಭದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.