ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌: 9ನೇ ಸ್ಥಾನಕ್ಕೆ ಜಿಗಿದ ಸಾತ್ವಿಕ್‌–ಚಿರಾಗ್‌ ನವದೆಹಲಿ: ಭಾರತದ ಬ್ಯಾಡ್ಮಿಂಟನ್‌ ಆಟಗಾರರಾದ ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಮಂಗಳವಾರ ಬಿಡುಗಡೆಯಾಗಿರುವ ಡಬಲ್ಸ್‌ ವಿಭಾಗದ ವಿಶ್ವ ರ‍್ಯಾಂಕಿಂಗ್‌ನಲ್ಲಿ ಒಂಬತ್ತನೇ ಸ್ಥಾನಕ್ಕೇರಿದ್ದಾರೆ. ಹೋದ ವಾರ ನಡೆದಿದ್ದ ಥಾಯ್ಲೆಂಡ್‌ ಓಪನ್‌ ಟೂರ್ನಿಯ ಪುರುಷರ ಡಬಲ್ಸ್‌ ವಿಭಾಗದಲ್ಲಿ ಸಾತ್ವಿಕ್‌ ಮತ್ತು ಚಿರಾಗ್‌ ಪ್ರಶಸ್ತಿ ಗೆದ್ದಿದ್ದರು. ಈ ಸಾಧನೆ ಮಾಡಿದ ಭಾರತದ ಮೊದಲ ಡಬಲ್ಸ್‌ ಜೋಡಿ ಎಂಬ ಹಿರಿಮೆಗೂ ಭಾಜನರಾಗಿದ್ದರು. ಭಾರತದ ಜೋಡಿಯು ರ‍್ಯಾಂಕಿಂಗ್‌ನಲ್ಲಿ ಒಟ್ಟು ಏಳು ಸ್ಥಾನ ಪ್ರಗತಿ ಕಂಡಿದೆ. ಮನು ಅತ್ರಿ ಮತ್ತು ಬಿ.ಸುಮೀತ್‌ ರೆಡ್ಡಿ ಅವರು 25ನೇ ಸ್ಥಾನ ಕಾಪಾಡಿಕೊಂಡಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್‌ (10), ಸಮೀರ್‌ ವರ್ಮಾ (13), ಬಿ.ಸಾಯಿ ಪ್ರಣೀತ್‌ (19), ಎಚ್‌.ಎಸ್‌.ಪ್ರಣಯ್‌ (31) ಮತ್ತು ಸೌರಭ್‌ ವರ್ಮಾ (44) ಅವರು ಹಿಂದಿನ ಸ್ಥಾನಗಳಲ್ಲೇ ಮುಂದುವರಿದಿದ್ದಾರೆ. ಪರುಪಳ್ಳಿ ಕಶ್ಯಪ್‌ ಮತ್ತು ಶುಭಾಂಕರ್‌ ಡೇ ಅವರು ಕ್ರಮವಾಗಿ 32 ಮತ್ತು 39ನೇ ಸ್ಥಾನಗಳಿಗೆ ಬಡ್ತಿ ಹೊಂದಿದ್ದಾರೆ. ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್‌ ಕ್ರಮವಾಗಿ ಐದು ಮತ್ತು ಎಂಟನೇ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ 23ನೇ ಸ್ಥಾನಕ್ಕೆ ಏರಿದ್ದಾರೆ. ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಪ್ರಣವ್‌ ಜೆರಿ ಚೋಪ್ರಾ ಮತ್ತು ಸಿಕ್ಕಿ ರೆಡ್ಡಿ ಒಂದು ಸ್ಥಾನ ಕಳೆದುಕೊಂಡಿದ್ದು, 23ನೇ ಸ್ಥಾನಕ್ಕೆ ಇಳಿದಿದ್ದಾರೆ. ಅಶ್ವಿನಿ ಪೊನ್ನಪ್ಪ ಮತ್ತು ರಣಕಿರೆಡ್ಡಿ 27ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರು ನಾಲ್ಕು ಸ್ಥಾನ ಕಳೆದುಕೊಂಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.