ಟಿ20 ರ‍್ಯಾಂಕಿಂಗ್‌: ಅಗ್ರಸ್ಥಾನ ಉಳಿಸಿಕೊಂಡ ಸೂರ್ಯಕುಮಾರ್‌ ದುಬೈ (ಪಿಟಿಐ): ಭಾರತದ ಸೂರ್ಯಕುಮಾರ್‌ ಯಾದವ್‌ ಅವರು ಐಸಿಸಿ ಟಿ20 ಬ್ಯಾಟರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಐಸಿಸಿ ಬುಧವಾರ ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಸೂರ್ಯಕುಮಾರ್‌, 906 ರೇಟಿಂಗ್‌ ಪಾಯಿಂಟ್ಸ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಮೊಹಮ್ಮದ್‌ ರಿಜ್ವಾನ್‌ (811 ರೇಟಿಂಗ್‌ ಪಾಯಿಂಟ್ಸ್‌) ಮತ್ತು ಬಾಬರ್ ಅಜಂ (755) ಅವರು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡನ್‌ ಮರ್ಕರಂ (748) ಹಾಗೂ ನ್ಯೂಜಿಲೆಂಡ್‌ನ ಡೆವೊನ್‌ ಕಾನ್ವೆ (745) ಬಳಿಕದ ಸ್ಥಾನದಲ್ಲಿದ್ದಾರೆ. ವಿರಾಟ್‌ ಕೊಹ್ಲಿ 15ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಫಲವಾಗಿದ್ದ ಸೂರ್ಯಕುಮಾರ್‌ ಅವರು ಐಪಿಎಲ್‌ ಟೂರ್ನಿಯಲ್ಲೂ ಅಬ್ಬರಿಸಿಲ್ಲ. ಮೂರು ಪಂದ್ಯಗಳಲ್ಲಿ ಕ್ರಮವಾಗಿ 15, 1 ಹಾಗೂ ಶೂನ್ಯಕ್ಕೆ ಔಟಾಗಿದ್ದರು. ಬೌಲರ್‌ಗಳ ಪಟ್ಟಿಯಲ್ಲಿ ಅಫ್ಗಾನಿಸ್ತಾನದ ರಶೀದ್‌ ಖಾನ್‌ ಅಗ್ರಸ್ಥಾನದಲ್ಲಿ ಮುಂದುವರಿದಿದ್ದು, ಅದೇ ದೇಶದ ಫಜಲ್‌ಹಕ್‌ ಫರೂಕಿ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಜೋಶ್‌ ಹ್ಯಾಜೆಲ್‌ವುಡ್ ಮತ್ತು ಶ್ರೀಲಂಕಾದ ವನಿಂದು ಹಸರಂಗ ಬಳಿಕದ ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದ ಯಾವುದೇ ಬೌಲರ್‌ ಅಗ್ರ 10 ರಲ್ಲಿ ಸ್ಥಾನ ಪಡೆದಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.