2023 : 14 ಸಾವಿರ ಟಿಕೆಟ್ ಬಿಡುಗಡೆ ಮಾಡಿದ ಬಿಸಿಸಿಐ ಬೆಂಗಳೂರು: ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಿದ್ದು, ಇಡೀ ಜಗತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ತುದಿಗಾಲಲ್ಲಿ ನಿಂತಿದೆ. ಅಕ್ಟೋಬರ್ 14ರಂದು ಅಹಮದಾಬಾದ್‌ನಲ್ಲಿ ಪಂದ್ಯ ನಡೆಯಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 14,000 ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿಗೆ ಪಾತ್ರವಾಗಿದೆ. ಇದೇ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಟಿಕೆಟ್‌ ಬೇಡಿಕೆ ಹೆಚ್ಚಾಗಿದೆ. ಇಂದಿನಿಂದ (ಭಾನುವಾರ) ಪಂದ್ಯದ ಟಿಕೆಟ್‌ ಮಾರಾಟ ಆರಂಭವಾಗಲಿದ್ದು, ಅಭಿಮಾನಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಟಿಕೆಟ್‌ಗಳನ್ನು ಖರೀದಿಸಬಹುದು ಎಂದು ಬಿಸಿಸಿಐ ತಿಳಿಸಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 1,30,000ಕ್ಕೂ ಹೆಚ್ಚು ಅಸನಗಳ ವ್ಯವಸ್ಥೆ ಇದೆ. ಇಲ್ಲಿ ಕಳೆದ ಗುರುವಾರ (ಅ.5ರಂದು) ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವಕಪ್ ಉದ್ಘಾಟನಾ ಪಂದ್ಯ ನಡೆದಿತ್ತು. ಈ ಪಂದ್ಯವನ್ನು 47 ಸಾವಿರ ಜನ ವೀಕ್ಷಿಸಿದ್ದರು. ಆತಿಥೇಯ ಭಾರತವು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಿದರೆ, ಶುಕ್ರವಾರ ಹೈದರಾಬಾದ್‌ನಲ್ಲಿ ಪಾಕಿಸ್ತಾನವು ನೆದರ್ಲೆಂಡ್ಸ್ ವಿರುದ್ಧ ಜಯ ದಾಖಲಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. 12 ವರ್ಷಗಳ ನಂತರ ಆತಿಥ್ಯ ವಹಿಸುತ್ತಿರುವ ಭಾರತವು ಟೂರ್ನಿಯಲ್ಲಿ ಶುಭಾರಂಭ ಮತ್ತು ಪ್ರಶಸ್ತಿ ಗೆಲುವಿನ ಸುಖಾಂತ್ಯ ಕಾಣುವುದೇ ಎಂಬ ಕುತೂಹಲ ಗರಿಗೆದರಿದೆ. 2011ರಲ್ಲಿ ಭಾರತ ಪ್ರಶಸ್ತಿ ಜಯಿಸಿತ್ತು. ಅದರ ನಂತರ ನಡೆದ ಎರಡು ವಿಶ್ವಕಪ್‌ಗಳಲ್ಲಿ ಎಡವಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.