2023: ಕೊಹ್ಲಿ ಫಿಫ್ಟಿ; ಡೆಲ್ಲಿ ಗೆಲುವಿಗೆ 182 ರನ್ ಗುರಿ ಒಡ್ಡಿದ ಆರ್‌ಸಿಬಿ ದೆಹಲಿ: ವಿರಾಟ್ ಕೊಹ್ಲಿ ಹಾಗೂ ಮಹಿಪಾಲ್ ಲೊಮ್ರೊರ್ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಇಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಾಲ್ಕು ವಿಕೆಟ್ 181 ರನ್ ಗಳಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ 182 ರನ್‌ಗಳ ಗುರಿ ಒಡ್ಡಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಾಯಕ ಫಫ್ ಡು ಪ್ಲೆಸಿ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 82 ರನ್ ಪೇರಿಸಿದರು. ನಾಯಕ ಡುಪ್ಲೆಸಿ 45 ರನ್ ಗಳಿಸಿ ಔಟ್ ಆದರು. ಅತ್ತ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ, ಅರ್ಧಶತಕ (55 ರನ್, 46 ಎಸೆತ) ಗಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟ್ ಆದರು. ಆದರೆ ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮಹಿಪಾಲ್ ತಂಡದ ಮೊತ್ತ 180ರ ಗಡಿ ದಾಟಲು ನೆರವಾದರು. 29 ಎಸೆತಗಳನ್ನು ಎದುರಿಸಿದ ಮಹಿಪಾಲ್ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿ ಔಟಾಗದೆ ಉಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.