2023 | ರಾಜಸ್ಥಾನ ವಿರುದ್ಧ ಆರ್‌ಸಿಬಿಗೆ ರೋಚಕ ಜಯ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್‌ ವಿರುದ್ಧ 7 ರನ್‌ಗಳ ರೋಚಕ ಜಯ ದಾಖಲಿಸಿದೆ. ಟಾಸ್‌ ಸೋತರೂ ಮೊದಲು ಬ್ಯಾಟ್‌ ಮಾಡುವ ಅವಕಾಶ ಗಿಟ್ಟಿಸಿಕೊಂಡ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 189 ರನ್‌ ಗಳಿಸಿತ್ತು. ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಅವರು ಮೊದಲ ಎಸೆತಕ್ಕೇ ಔಟಾದರೂ, ಫಫ್‌ ಡುಪ್ಲೆಸಿಸ್‌ 62 (39 ಎಸೆತ), ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ 77 (44) ರನ್‌ಗಳ ಕೊಡುಗೆಯಿಂದ ಆರ್‌ಸಿಬಿ ಸವಾಲಿನ ಮೊತ್ತ ಗಳಿಸುವಲ್ಲಿ ಯಶಸ್ವಿಯಾಯಿತು. ಈ ಮೊತ್ತವನ್ನು ಬೆನ್ನು ಹತ್ತಿದ ರಾಜಸ್ಥಾನ ತಂಡಕ್ಕೆ ಯಶಸ್ವಿ ಜೈಸ್ವಾಲ್‌ (47) ಮತ್ತು ದೇವತ್ತ ಪಡಿಕ್ಕಲ್‌ (52) ಭದ್ರ ಬುನಾದಿ ಹಾಕಿಕೊಟ್ಟರು. ಆದರೆ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡಲಿಲ್ಲ. ಧ್ರುವ್‌ ಜುರೆಲ್‌ (34) ಕೊನೆಯಲ್ಲಿ ಪ್ರತಿರೋಧ ತೋರಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಅಂತಿಮವಾಗಿ ರಾಜಸ್ಥಾನ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟದೊಂದಿಗೆ 182ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆರ್‌ಸಿಬಿ ಪರ ಹರ್ಷಲ್‌ ಪಟೇಲ್‌ ಮೂರು ವಿಕೆಟ್‌ ಪಡೆದು ಮಿಂಚಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.