ಗಾಯಗೊಂಡಿರುವ ಕೆ.ಎಲ್. ರಾಹುಲ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಅಲಭ್ಯ ಕಾನ್ಪುರ: ಭಾರತ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗಾಯಗೊಂಡಿದ್ದು, ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ, ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಭಾರತ ತಂಡದಲ್ಲಿದ್ದ ಸೂರ್ಯ ಕುಮಾರ್ ಯಾದವ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ‘ಕೆ.ಎಲ್. ರಾಹುಲ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುತ್ತಿಲ್ಲ’ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಮಂಗಳವಾರ ಗ್ರೀನ್ ಪಾರ್ಕ್ ಕ್ರೀಡಾಂಗಣದ ಅಭ್ಯಾಸದಲ್ಲೂ ರಾಹುಲ್ ಕಾಣಿಸಿಕೊಳ್ಳಲಿಲ್ಲ. ರಾಹುಲ್ ಅವರ ಗಾಯದ ಗಂಭೀರತೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ತಂಡದ ನೆಟ್ ಅಭ್ಯಾಸದ ವೇಳೆ ಮಯಂಕ್ ಅಗರವಾಲ್ ಜೊತೆಗೆ ಶುಭಮನ್ ಗಿಲ್ ಅವರು ಬ್ಯಾಟಿಂಗ್ ಮಾಡುತ್ತಿದ್ದದ್ದು ಕಂಡುಬಂದಿದೆ. ಟೆಸ್ಟ್ ತಂಡದ ಉಪನಾಯಕ ಚೇತೇಶ್ವರಪೂಜಾರ ಸಹ ಬ್ಯಾಟಿಂಗ್ ಮಾಡಿದರು. ಈ ಮೂಲಕ ಸೂರ್ಯಕುಮಾರ್ ಯಾದವ್ ಅಥವಾ ಶ್ರೇಯಸ್ ಅಯ್ಯರ್ ಇಬ್ಬರಲ್ಲಿ ಒಬ್ಬರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಮಧ್ಯಮ ಕ್ರಮಾಂಕದಲ್ಲಿ ಆಡುವುದು ಸ್ಪಷ್ಟವಾಗಿದೆ. ಶುಭಮನ್ ಗಿಲ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡುವ ನಿರೀಕ್ಷೆ ಇತ್ತು. ಇದೀಗ, ರಾಹುಲ್ ಅನುಪಸ್ಥಿತಿಯಲ್ಲಿ ಅವರು, ಇನಿಂಗ್ಸ್ ಆರಂಭಿಸುವ ನಿರೀಕ್ಷೆ ಇದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.