ಐಸಿಸಿ ಟಿ20 ರ‍್ಯಾಂಕಿಂಗ್‌: 3ನೇ ಸ್ಥಾನಕ್ಕೆ ರಾಹುಲ್ ದುಬೈ:ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಐಸಿಸಿ ಟಿ20 ಬ್ಯಾಟ್ಸ್‌ಮನ್‌ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನ ಗಳಿಸಿದ್ದಾರೆ. ಭಾರತ ಸೀಮಿತ ಓವರ್‌ಗಳ ತಂಡದ ಉಪನಾಯಕರೂ ಆಗಿರುವ ಕನ್ನಡಿಗ ರಾಹುಲ್, 816 ರೇಟಿಂಗ್ ಪಾಯಿಂಟ್ಸ್‌ ಗಳಿಸಿದ್ದಾರೆ. ಇಂಗ್ಲೆಂಡ್ ತಂಡದ ಡೇವಿಡ್ ಮಲಾನ್ (915) ಮತ್ತು ಪಾಕಿಸ್ತಾನದ ಬಾಬರ್ ಆಜಂ (871) ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ರಾಹುಲ್ ಅರ್ಧಶತಕ ಗಳಿಸಿದ್ದರು. ಸಿಡ್ನಿಯಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ 30 ರನ್‌ ಗಳಿಸಿದ್ದರು.ಇದೇ ಸರಣಿಯ ಮೂರನೇ ಪಂದ್ಯದಲ್ಲಿ 85 ರನ್ ಗಳಿಸಿದ್ದ ನಾಯಕ ವಿರಾಟ್ ಕೊಹ್ಲಿ ಎಂಟನೇ ಸ್ಥಾನಕ್ಕೇರಿದ್ದಾರೆ. ಅವರು ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.