98 ನಿಮಿಷಗಳ ಸ್ವಾತಂತ್ರ್ಯೋತ್ಸವದ ಭಾಷಣ: ಪ್ರಧಾನಿ ಮೋದಿ ದಾಖಲೆ
ನವದೆಹಲಿ:78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದಾಖಲೆಯ 98 ನಿಮಿಷಗಳ ಕಾಲ ಭಾಷಣ ಮಾಡಿದರು.
ಸ್ವಾತಂತ್ರ್ಯ ದಿನಾಚರಣೆಯಂದು ಅತಿ ದೀರ್ಘಾವಧಿಯ ಭಾಷಣ ಮಾಡಿದ ಭಾರತದ ಪ್ರಧಾನಿ ಎನಿಸಿದ್ದಾರೆ.
ಪದೇ ಪದೇ ನಡೆಯುತ್ತಿರುವ ಚುನಾವಣೆಗಳು ದೇಶದ ಪ್ರಗತಿಗೆ ಅಡತೆಗಳನ್ನು ಸೃಷ್ಟಿಸುತ್ತಿವೆ. ಎಲ್ಲಾದರೂ ಒಂದು ಕಡೆ ಮೂರರಿಂದ ಆರು ತಿಂಗಳಿಗೊಮ್ಮೆಚುನಾವಣೆ ನಡೆಯುತ್ತಿರುತ್ತವೆ. ‘ಒಂದು ದೇಶ, ಒಂದು ಚುನಾವಣೆ’ ನನಸಾಗಿಸಲು ನಾವೆಲ್ಲರೂ ಮುಂದೆ ಬರಬೇಕಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ಎದುರಾಗಿದ್ದು, ಪರಿಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ. ಭಾರತ ಯಾವಾಗಲೂ ಬಾಂಗ್ಲಾದ ಅಭಿವೃದ್ಧಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ಜಿ20 ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ನಿಗಿದಿತ ಅವಧಿಗಿಂತಲೂ ಮುಂಚಿತವಾಗಿ ಹವಾಮಾನ ಗುರಿ ಸಾಧಿಸಿದ ಏಕೈಕ ರಾಷ್ಟ್ರ ಭಾರತ ಆಗಿದೆ ಎಂದು ಪ್ರತಿಪಾದಿಸಿದ್ದಾರೆ.
ಮಹಿಳೆಯರ ಮೇಲಿನ ಅಪರಾಧಗಳ ತ್ವರಿತ ತನಿಖೆಯಾಗಬೇಕು. ಇಂತಹ ಹೇಯ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನಾಗರಿಕರು ಸಲಹೆಗಳನ್ನು ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲು ನಾವು ಮಹತ್ತರ ಕ್ರಮ ಕೈಗೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಮಾಡಿದ್ದೇವೆ. ಹಿಂದಿನ ಹಲವು ನಿರ್ಬಂಧಗಳನ್ನು ತೆರವುಗೊಳಿಸಿದ್ದೇವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ನೂರಾರು ಸ್ಟಾರ್ಟ್‌ಅಪ್‌ಗಳು ಬಂದಿವೆ. ಇದು ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದ್ದಾರೆ.
ವಿದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಲಕ್ಷ-ಕೋಟಿ ಖರ್ಚು ಮಾಡುತ್ತಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ನಾವು 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
‘ಸುಮಾರು 10 ಕೋಟಿ ಮಹಿಳೆಯರು ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದನ್ನು ನೋಡಿ ನಾವು ಹೆಮ್ಮೆಪಡುತ್ತೇವೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸತತ 11ನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಮನಮೋಹನ್‌ ಸಿಂಗ್ ಅವರು ಸತತ 10 ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದ್ದರು. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು 17 ಬಾರಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 16 ಬಾರಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದರು.
‘ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶ ಎಂದು ಚಿರಋಣಿಯಾಗಿದ್ದು, ಅವರ ತ್ಯಾಗ, ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶದಾದ್ಯಂತ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.