ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲುಅರ್ಜುನ್, ಶಾಸಕ ರವಿಚಂದ್ರ ರೆಡ್ಡಿ ವಿರುದ್ಧ ಪ್ರಕರಣ ದಾಖಲು
ಆಂಧ್ರಪ್ರದೇಶ:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರ ನಿವಾಸದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆದಿದ್ದು, ಇದರಿಂದ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗೆ ಕಾರಣವಾಗಿದೆ. ಶಾಸಕ ರೆಡ್ಡಿ ಅವರು ಶನಿವಾರ ಸಭೆಗೆ ಪೂರ್ವಾನುಮತಿ ಇಲ್ಲದೆ ಅಲ್ಲು ಅರ್ಜುನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಆಂಧ್ರಪ್ರದೇಶದಲ್ಲಿ ಮೇ 13ರಂದು ನಡೆಯಲಿರುವ ಮತದಾನಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದ ಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ.
ಆಂಧ್ರಪ್ರದೇಶದ ನಂದ್ಯಾಲ ಗ್ರಾಮಾಂತರ ಕ್ಷೇತ್ರದ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿರುವ ತಹಸೀಲ್ದಾರ್ ಪಿ ರಾಮಚಂದ್ರರಾವ್ ಅವರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ರೆಡ್ಡಿ ಅವರ ನಿವಾಸಕ್ಕೆ ಅಲ್ಲು ಅರ್ಜುನ್‌ ಅವರು ಭೇಟಿ ನೀಡಿದಾಗ ಅಪಾರ ಜನರು ನೆರೆದಿದ್ದರು.