ಮೊದಲ ಕ್ವಾಲಿಫೈಯರ್ ಪಂದ್ಯ ಇಂದು: ಮುಂಬೈಗೆ ಡೆಲ್ಲಿ ಸವಾಲು
ದುಬೈ:ಪಾಯಿಂಟ್ ಪಟ್ಟಿಯ ಅಗ್ರಸ್ಥಾನಿ ಮುಂಬೈ ಇಂಡಿಯನ್ಸ್ ಮತ್ತು ಮೊದಲ ಫೈನಲ್ ಪ್ರವೇಶದ ಕನಸು ಹೊತ್ತು ಕಣಕ್ಕೆ ಇಳಿಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗುರುವಾರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣಸಲಿವೆ.
ನಾಲ್ಕು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ ಒಂಬತ್ತರಲ್ಲಿ ಜಯ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಗಳಿಸಿದೆ. ಡೆಲ್ಲಿ ಎಂಟು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ.
ಲೀಗ್ ಹಂತದಲ್ಲಿ ಮುಂಬೈ ಎದುರಿನ ಎರಡೂ ಪಂದ್ಯಗಳನ್ನು ಸೋತಿರುವ ಡೆಲ್ಲಿ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಮೋಘ ಆರು ವಿಕೆಟ್‌ಗಳ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿದೆ.
ಕೊನೆಯ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ 10 ವಿಕೆಟ್‌ಗಳಿಂದ ಸೋತಿರುವುದು ಮುಂಬೈ ಇಂಡಿಯನ್ಸ್ ತಂಡದಲ್ಲಿ ಆತಂಕ ಸೃಷ್ಟಿಸಿದೆ.