 : ಎತ್ತಿನಹೊಳೆ 2ನೇ ಹಂತವನ್ನೂ ನಾನೇ ಉದ್ಘಾಟಿಸಿ ನೀರು ಕೊಡುವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ
ಹಾಸನ: ಎತ್ತಿನಹೊಳೆ ಕುಡಿಯುವ ನೀರು ಯೋಜನೆಯ ( ) ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಃಸಿದ್ಧ. ಅದನ್ನೂ ನಾನೇ ಉದ್ಘಾಟಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( ) ಬಯಲುಸೀಮೆಯ ಜನರಿಗೆ ಭರವಸೆ ನೀಡಿದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನೆಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಸ್ಪಷ್ಟ ಭರವಸೆ ನೀಡಿದರು.
ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.
ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಃಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.
ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು ಒದಗಿಸುವ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.
ಈ ಸುದ್ದಿ ಓದಿ: : ಎತ್ತಿನಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಚಾಲನೆ; 10 ವರ್ಷದ ನಂತರ ನೀರು ಬಂತು!