 : ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ 15 ದಿನ ಗಡುವು ಕೊಟ್ಟ ಡಿಕೆಶಿ
ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ( ) ಇನ್ನು 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೊ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಆದ್ಯ ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಸೂಚನೆ ನೀಡಿದ್ದಾರೆ.
ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ (  ) ಅವರು ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೊವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್‌ಸಿಎಲ್‌ ಎಂಡಿ ಯಾರಾದರೂ ಆಗಲಿ, ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿ, ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಸಚಿವರು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ರಾಜಧಾನಿಯ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸೂಚಿಸಿದ್ದಾರೆ.

ಬೆಂಗಳೂರು:ಬಯಲು ಸೀಮೆ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್ ನೀಡಿದೆ.ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವ ಹಾಗೂ ಅಂತರ್ಜಲ ಮರುಪೂರಣಕ್ಕಾಗಿ ಕೈಗೆತ್ತಿಕೊಂಡಿರುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ( ) ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ.
ಈ ಬಗ್ಗೆ ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದು,  ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ, ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್ ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.
ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರೂ, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಭೇದ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು ಎಂದು ತಿಳಿಸಿದರು.
ಕೋವಿಡ್ ಸಮಯದಲ್ಲಿನ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಅವರ ಸಮಿತಿ ವರದಿ ಸಲ್ಲಿಕೆ ಹಾಗೂ ಮಾಜಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ವಿಚಾರವಾಗಿ ಸರ್ಕಾರದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ ಎಂದು ತಿಳಿಸಿದರು.
ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್‌ಗಳು ಏನಾದವು ಎಂದು ಕೇಳಿದಾಗ, ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ. ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧದ ಎರಡು ಅರ್ಜಿಗಳು ಮಾತ್ರ ರಾಜ್ಯಪಾಲರ ಬಳಿ ಉಳಿದುಕೊಂಡಿವೆಯಂತೆ ಎಂದು ಕೇಳಿದಾಗ, ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ವಿರುದ್ಧ ಕೆಲವರು ಅರ್ಜಿ ಕೊಡುತ್ತಿರುತ್ತಾರೆ. ಮತ್ತೆ ಕೆಲವರು ನನ್ನ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ದೂರು ನೀಡಲಿ ಎಂದು ತಿಳಿಸಿದರು.
ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್ ಮಾರುವಿನ್ಯಾಸ
ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಸ್ನೇಹಿತರು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು. ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ ಎಂದು ತಿಳಿಸಿದರು.