90km  : ಸೆ.15ರಂದು ಪ್ರಜಾಪ್ರಭುತ್ವ ದಿನ: 90 ಕಿ.ಮೀ. ಮಾನವ ಸರಪಳಿ
ತುಮಕೂರು:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾ ಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿ ಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾ ಪಂಚಾಯತಿಯಲ್ಲಿ ಶುಕ್ರವಾರ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾ ಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು. ಭಾರತ ದೇಶದಲ್ಲಿ ಪ್ರಜಾಪ್ರಭತ್ವವನ್ನು ಗಟ್ಟಿಗೊಳಿಸಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸ ಲಾಗುವುದೆಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಮಾನವ ಸರಪಳಿ ಯಲ್ಲಿ ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳು, ಕಲಾವಿದರು, ಕ್ರೀಡಾಪಟುಗಳು, ಮಹಿಳಾ ಸಂಘಟನೆಗಳು, ರೈತ ಬಾಂಧವರು, ಸಾಹಿತಿಗಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿದ್ದ ವಿವಿಧ ಸಂಘಟನೆಗಳ ಮುಖಂಡರು ಪ್ರಜಾಪ್ರಭುತ್ವ ಕಾರ್ಯಕ್ರಮವನ್ನು ದಲಿತ ಮುಖಂಡರಿಗಷ್ಟೇ ಸೀಮಿತಗೊಳಿಸದೆ ಎಲ್ಲ ಇಲಾಖೆ, ಸಂಘ-ಸಂಸ್ಥೆಗಳನ್ನು ತೊಡಗಿಸಿಕೊಳ್ಳಬೇಕು. ಮಾಹಿತಿ ತಂತ್ರಜ್ಞಾನ, ವೈದ್ಯಕೀಯ ಕಾಲೇಜು, ಇಂಜನಿಯರಿಂಗ್ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದು, ಅವರನ್ನು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.