ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​ ಅನುಮತಿ
ಬೆಂಗಳೂರು:ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್​ ಅನುಮತಿ ನೀಡಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ.
ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.
ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೇ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್​​ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರೆಸಲು ಆದೇಶಿಸಿದೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ.