ಸಾಂಕೇತಿಕ ಬಂದ್ ವಾಪಸ್‌: ಕೆಪಿಸಿಸಿ ಅಧ್ಯಕ್ಷ
ಬೆಂಗಳೂರು:ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ.
ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ 9 ರಿಂದ 11 ಗಂಟೆಯ ವರೆಗೆ ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕರೆ ನೀಡಿತ್ತು. ದ್ವಿತೀಯ ಪಿಯುಸಿ ಮಕ್ಕಳ ಪರೀಕ್ಷೆ ಹಿನ್ನೆಲೆ, ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾರ್ಚ್ ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು.